BlogCulturalEconomyEducationEntertainmentFashionHighlightsHuman storiesLifestyleLocal newsNatureReligionState newsSuccess storiesTop StoriesTrendingWomen Care

ಜುಲೈ 6 – ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಕುಂದಾಪ್ರ ಕನ್ನಡ ‘ವಾಲ್ಪೆಲ್ಲ’ | ವಿವಿಧ ಸ್ಪರ್ಧೆಗಳು |ನೆಲಮೂಲದ ಪರಂಪರೆಗೆ ವಿದ್ಯಾರ್ಥಿಗಳ ಸಾಥ್| ಸುದ್ಧಿಗೋಷ್ಠಿ

Aware others:

ಕುಂದಾಪುರ: ಕುಂದಾಪ್ರ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ನೆಲಮೂಲದ ಕಲಾ ಪರಂಪರೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಮಂಗಳೂರು ವಿಶ್ವ ವಿದ್ಯಾನಿಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಮತ್ತು ಯಡಾಡಿ-ಮತ್ಯಾಡಿಯ ಸುಜ್ಞಾನ ಎಜ್ಯುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಜುಲೈ 6ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಕುಂದಗನ್ನಡದ ಕಂಪು ಸೂಸುವ ‘ವಾಲ್ಪೆಲ್ಲ’ ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಸಚಿವ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಯಡಾಡಿ–ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿ ಪೂರ್ಣ ಪ್ರಮಾಣದ ಕುಂದಾಪ್ರ ಕನ್ನಡ ಅಧ್ಯಯನ ಪೀಠವನ್ನು ಸ್ಥಾಪಿಸಿದೆ. ಈ ಪೀಠ ಸ್ಥಾಪನೆಯಾದ ಬಳಿಕ ಭಾಷೆಯ ಅಭಿವೃದ್ಧಿಗೆ ಪೂರಕವಾಗಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಈ ನೆಲದ ಕಲೆ, ಸಂಗೀತ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸೊಗಡನ್ನು ಪರಿಚಯಿಸುವ ಮಹತ್ತರ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.


ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲೇ ಕುಂದಾಪ್ರ ಕನ್ನಡ ಮಾತನಾಡುವುದು ಕಡಿಮೆಯಾಗುತ್ತಿರುವುದಕ್ಕೆ ಕಳಕಳಿ ವ್ಯಕ್ತಪಡಿಸಿದ ಅವರು, ಕೆಲವರು ತಮ್ಮ ಮಕ್ಕಳೊಂದಿಗೆ ಶುದ್ಧ ಕನ್ನಡದಲ್ಲಿ, ಇನ್ನು ಕೆಲವರು ಇಂಗ್ಲೀಷ್‌ನಲ್ಲಿ ಮಾತನಾಡುತ್ತಾರೆ. ಮುಂಬೈನಲ್ಲಿರುವವರು ಮನೆಗಳಲ್ಲಿ ಮರಾಠಿಯಲ್ಲೇ ಮಾತನಾಡುತ್ತಾರೆ. ಆದರೆ ನಾವು ನಮ್ಮ ಕುಂದಾಪ್ರ ಕನ್ನಡವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿದೆ. ಮಕ್ಕಳಲ್ಲೂ ಈ ಭಾಷೆಯ ಅಭಿಮಾನ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ರಮೇಶ್ ಶೆಟ್ಟಿ ಮಾತನಾಡಿ, ಬೈಂದೂರು, ಕುಂದಾಪುರ, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕಿನ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪದವಿ ಪೂರ್ವ ವಿಭಾಗದ ವಿಜೇತರಿಗೆ ಪ್ರಥಮ ರೂ.10,000, ದ್ವಿತೀಯ ರೂ.7,000 ಹಾಗೂ ತೃತೀಯ ರೂ.5,000 ನಗದು ಬಹುಮಾನ ನೀಡಲಾಗುವುದು. ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದ ವಿಜೇತರಿಗೆ ಪ್ರಥಮ ರೂ.5,000, ದ್ವಿತೀಯ ರೂ.3,000 ಹಾಗೂ ತೃತೀಯ ರೂ.2,000 ಬಹುಮಾನ ನೀಡಲಾಗುವುದಲ್ಲದೆ, ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕೋಶಾಧಿಕಾರಿ ಭರತ್ ಕುಮಾರ್ ಶೆಟ್ಟಿ ಮಾತನಾಡಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಟ್ರಸ್ಟ್ ವತಿಯಿಂದ ಪ್ರತಿಷ್ಠಿತ ವಿದ್ಯಾರಣ್ಯ ಪುರಸ್ಕಾರ ಪ್ರದಾನ ಮಾಡಲಾಗುವುದು. ಈ ಬಾರಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ರಾಜು ಮೊಗವೀರ ಹಾಗೂ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸಂಯೋಜಕ ಪ್ರೊ. ನಾಗಪ್ಪಗೌಡ ಅವರನ್ನು ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಸಂಜೆ 4 ಗಂಟೆಗೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕೋಟೇಶ್ವರ, ಶಿರಿಯಾರ ಹಾಗೂ ಬಿಟ್ಕಲ್‌ಕಟ್ಟೆ ಭಾಗಗಳಿಂದ ಆಗಮಿಸುವವರಿಗೆ ಸಂಸ್ಥೆಯ ಬಸ್ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾದ ಪಂಜು ಗಂಗೊಳ್ಳಿ, ಉದಯ ಶೆಟ್ಟಿ ಪಡುಕೆರೆ ಉಪಸ್ಥಿತರಿದ್ದರು. ಸಮಿತಿ ಸದಸ್ಯ ಹಾಗೂ ಪತ್ರಕರ್ತ ಕೆ.ಸಿ. ರಾಜೇಶ್ ಸ್ವಾಗತಿಸಿ ವಂದಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!