ಬಾರ್ಕೂರು: ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಓಣಂ ಸಂಭ್ರಮ
ಬಾರ್ಕೂರು: ಇಲ್ಲಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಓಣಂ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಲಾಯಿತು.

“ಸಂಸ್ಕೃತಿ ಮತ್ತು ಸಂಪ್ರದಾಯಗಳ ಸಂಗಮ” ಎಂಬ ಆಶಯದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮವು ಕೇರಳದ ಸುಸಂಸ್ಕೃತ ಪರಂಪರೆ ಹಾಗೂ ಭಾರತೀಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಕಣ್ಣಿಗೆ ಕಟ್ಟುವಂತೆ ಅನಾವರಣಗೊಳಿಸಿತು. ಸುಂದರವಾಗಿ ಅಲಂಕರಿಸಲಾಗಿದ್ದ ಹೂವಿನ ರಂಗೋಲಿ ಮುಂದೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, “ಹಬ್ಬಗಳು ಕೇವಲ ಸಂಭ್ರಮದ ಕ್ಷಣಗಳಷ್ಟೇ ಅಲ್ಲ; ಅವು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿಸುವ ಸೇತುವೆಗಳು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಇಂತಹ ಆಚರಣೆಗಳು ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸುತ್ತವೆ” ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆ ಹಾಗೂ ಉತ್ಸಾಹ ಮೆಚ್ಚುವಂತದ್ದು. ನಮ್ಮ ಆಚರಣೆಗಳು ಮತ್ತು ಸಾಂಸ್ಕೃತಿಕ ಮೌಲ್ಯಗಳು ಕೇವಲ ಒಂದು ದಿನದ ಸಂಭ್ರಮಕ್ಕೆ ಸೀಮಿತವಾಗದೆ, ಜೀವನದುದ್ದಕ್ಕೂ ನಮ್ಮೊಂದಿಗೆ ಉಳಿಯಬೇಕು. ಸಂಸ್ಕೃತಿಯ ಬೇರುಗಳು ಗಟ್ಟಿಯಾಗಿದ್ದಾಗ ಮಾತ್ರ ಭವಿಷ್ಯದ ಪೀಳಿಗೆಯ ಹೆಜ್ಜೆಗಳು ದೃಢವಾಗಲು ಸಾಧ್ಯ” ಎಂದು ಕರೆ ನೀಡಿದರು.



ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ ಮಾತನಾಡಿ, “ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ದೇಶದ ವಿವಿಧ ನಾಡಿನ ಸಂಪ್ರದಾಯಗಳ ಬಗ್ಗೆ ಅರಿವು ಹಾಗೂ ಗೌರವವನ್ನು ಬೆಳೆಸಿಕೊಳ್ಳಲು ಉತ್ತಮ ವೇದಿಕೆಯಾಗುತ್ತವೆ” ಎಂದರು.



ಪ್ರಥಮ ಪಿಯುಸಿ ವಿದ್ಯಾರ್ಥಿ ಸುಚಿತ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು.
