BlogEconomyEducationEntertainmentFashionGovernmentHighlightsHuman storiesLifestyleLocal newsPoliticsState newsTop StoriesTrending

ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರದ ಕಟ್ಟಡವನ್ನು ಸೂಕ್ತ ಹಾಗೂ ಸದ್ಬಳಕೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಸರ್ಕಾರದ ಚಿಂತನೆ – ಡಿಸಿಎಂ ಡಾ. ಜಿ. ಪರಮೇಶ್ವರ

Aware others:

ಉಡುಪಿ: ಸುಮಾರು 53.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬೆಳಪು ಗ್ರಾಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರದ ಕಟ್ಟಡವು ಕೆಲ ವರ್ಷಗಳಿಂದ ಬಳಕೆಯಾಗದೆ ಖಾಲಿ ಬಿದ್ದಿದ್ದು, ದುರಾವಸ್ಥೆಗೆ ತಲುಪುವ ಭೀತಿಯಲ್ಲಿದೆ. ಈ ನಿಟ್ಟಿನಲ್ಲಿ ಕಟ್ಟಡ ಹಾಗೂ ಕ್ಯಾಂಪಸ್ ಅನ್ನು ಸೂಕ್ತ ಹಾಗೂ ಸದ್ಬಳಕೆಯ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಸರ್ಕಾರದ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

2014-15ನೇ ಸಾಲಿನ ಬಜೆಟ್‌ನಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸುವ ಕುರಿತು ಘೋಷಣೆ ಮಾಡಲಾಗಿತ್ತು. ಕೇಂದ್ರ ಸರ್ಕಾರದ ರೂಸಾ (RUSA) ಯೋಜನೆಯಡಿ, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರೂಸಾ ಅನುದಾನದ ಮೂಲಕ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿತ್ತು. ರಾಜ್ಯದಲ್ಲಿ ಎರಡು ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದ್ದು, ಅದರಲ್ಲಿ ಒಂದನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಆಯ್ಕೆ ಮಾಡಲಾಗಿತ್ತು. ವಿಜ್ಞಾನ ಕೇಂದ್ರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ನಕ್ಷೆ ತಯಾರಿಸಿ, ಅಗತ್ಯತೆಗಳ ಬಗ್ಗೆ ಚರ್ಚಿಸಿ, ಅನುಮೋದನೆ ಪಡೆದುಕೊಂಡ ಬಳಿಕ ಕಾಮಗಾರಿ ಆರಂಭಿಸಲಾಗಿತ್ತು. ಸುಮಾರು 50ರಿಂದ 60 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ನಿರ್ಮಿಸಲಾಗಿದೆ. ಆದರೆ ಕಾರಣಾಂತರಗಳಿಂದ ರೂಸಾ ಕಾರ್ಯಕ್ರಮ ಸ್ಥಗಿತಗೊಂಡಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಿಂದಲೂ ಅನುದಾನ ದೊರೆಯದ ಹಿನ್ನೆಲೆಯಲ್ಲಿ ವಿಜ್ಞಾನ ಕೇಂದ್ರದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಈ ವಿಚಾರ ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ಬಂದಿದೆ. ಇದೀಗ ವಿಜ್ಞಾನ ಕೇಂದ್ರಕ್ಕೆ ಚಾಲನೆ ನೀಡುವ ಕುರಿತು ಪ್ರಸ್ತಾಪ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಸ್ಪೋರ್ಟ್ಸ್ ಯುನಿವರ್ಸಿಟಿ ಮಾಡಬೇಕು ಎಂಬ ಚಿಂತನೆ ಇದೆ. ಅದು ಇಲ್ಲಿ ಸಾಧ್ಯವಾಗಬಹುದೇ ಎಂಬುದನ್ನು ಪರಿಶೀಲಿಸಲು ಬಂದಿದ್ದೇನೆ. ಉಡುಪಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಬೇಡಿಕೆ ಇದೆ ಎಂದ ಅವರು, ಈ ಎಲ್ಲಾ ವಿಚಾರಗಳ ಕುರಿತು ಮಾಹಿತಿ ಪಡೆದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಒಟ್ಟಾರೆ, ಇಲ್ಲಿ ನಿರ್ಮಿಸಿರುವ ಕಟ್ಟಡಗಳು ಹಾಗೂ ಅಭಿವೃದ್ಧಿಪಡಿಸಿರುವ ಕ್ಯಾಂಪಸ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರದ ಹಂತದಲ್ಲಿ ಅಗತ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

 ಕರಾವಳಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಕುರಿತು ಮಾತನಾಡಿದ ಡಿಸಿಎಂ, ಈ ಭಾಗದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ಸಭೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ. ಈಗಾಗಲೇ ಸರ್ಕಾರದ ಗಮನಕ್ಕೆ ಬಂದಿರುವ ಕೆಲವು ಸಮಸ್ಯೆಗಳಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಇನ್ನೂ ಹಲವು ಸಣ್ಣಪುಟ್ಟ ಸಮಸ್ಯೆಗಳು ಹಾಗೂ ವಿವಿಧ ವಿಚಾರಗಳು ಸರ್ಕಾರದ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಕರಾವಳಿ ಭಾಗವನ್ನು ಕೇರಳ ಹಾಗೂ ಗೋವಾ ರಾಜ್ಯಗಳು ಪರಿಣಾಮಕಾರಿಯಾಗಿ ಬಳಸಿಕೊಂಡಿವೆ. ಕರ್ನಾಟಕದ ಕರಾವಳಿ ಭಾಗವನ್ನೂ ಇನ್ನಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುವ ಉದ್ದೇಶ ಸರ್ಕಾರಕ್ಕಿದೆ. ಉಡುಪಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್ ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮೂಲಕ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಬೆಳೆಸಿದರೆ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ಆರ್ಥಿಕ ಚಟುವಟಿಕೆಗಳೂ ಹೆಚ್ಚಾಗಲಿವೆ. ಈ ಹಿನ್ನೆಲೆಯಲ್ಲಿ ಟೂರಿಸಂ ಪಾಲಿಸಿಯ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ದೊಡ್ಡ ದೊಡ್ಡ ಕೈಗಾರಿಕೆಗಳನ್ನು ಈ ಭಾಗಕ್ಕೆ ತರುವುದು ಕಷ್ಟವಾಗಬಹುದು. ಆದರೆ ಸಾಫ್ಟ್ ಇಂಡಸ್ಟ್ರಿಗಳನ್ನು ಕರಾವಳಿ ಭಾಗಕ್ಕೆ ತರಲು ಪ್ರಯತ್ನಿಸಲಾಗುವುದು. ಕರಾವಳಿ ಭಾಗದಲ್ಲಿ ಉತ್ತಮ ಕ್ರೀಡಾಂಗಣ ವ್ಯವಸ್ಥೆ ಕಲ್ಪಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಉಡುಪಿ ಸ್ಟೇಡಿಯಂ, ಮಂಗಳೂರಿನ ಮಂಗಳ ಸ್ಟೇಡಿಯಂ ಸೇರಿದಂತೆ ಕ್ರೀಡಾಂಗಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಡಿಸಿಎಂ ತಿಳಿಸಿದರು.

ಸಚಿವ ಸಂಪುಟದಲ್ಲಿ ತೆಗೆದುಕೊಳ್ಳುವ ತೀರ್ಮಾನಗಳು ಅನುಷ್ಠಾನಕ್ಕೆ ಬರುತ್ತವೆ. ಸಚಿವ ಸಂಪುಟದ ತೀರ್ಮಾನವೆಂದರೆ ಅದು ಇಡೀ ಸರ್ಕಾರದ ತೀರ್ಮಾನವಾಗಿದೆ. ಸರ್ಕಾರ ಕೈಗೊಳ್ಳುವ ನಿರ್ಣಯಗಳನ್ನು ಅನುಷ್ಠಾನಗೊಳಿಸಲಾಗುವುದು. ಇಲ್ಲವಾದರೆ ಸಚಿವ ಸಂಪುಟಕ್ಕೆ ಯಾವುದೇ ವಿಚಾರಗಳನ್ನು ತರುವ ಅವಶ್ಯಕತೆಯೇ ಇರುವುದಿಲ್ಲ. ಟೀಕೆ ಮಾಡುವವರು ಇದ್ದೇ ಇರುತ್ತಾರೆ. ಅದನ್ನೆಲ್ಲ ನಾವು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್, ಬರದ ಕುರಿತು ಚರ್ಚೆ : ಸೆಪ್ಟೆಂಬರ್ 21, 22 ಮತ್ತು 23ರಂದು ವಿಶೇಷ ಅಧಿವೇಶನ ಕರೆಯಲಾಗಿದೆ. ಮೊದಲನೆಯದಾಗಿ ಕಸ್ತೂರಿ ರಂಗನ್ ವರದಿ ವಿಚಾರದ ಬಗ್ಗೆ ಚರ್ಚಿಸಲಾಗುವುದು. ರಾಜ್ಯದಲ್ಲಿ ವಿಪರೀತ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ರೈತರಿಗೆ ಯಾವ ರೀತಿ ಸ್ಪಂದಿಸಬೇಕು ಹಾಗೂ ಯಾವ ರೀತಿಯಲ್ಲಿ ನೆರವು ನೀಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗುವುದು. ಈ ವಿಶೇಷ ಅಧಿವೇಶನವನ್ನು ರೈತರ ಹಿತದೃಷ್ಟಿಯಿಂದ ಕರೆಯಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಮಂಗಳೂರು ವಿವಿ ರಿಜಿಸ್ಟ್ರಾರ್ ಸಂತೋಷ್ ಬಿ.ಜಗಲಾಸರ್, ಕರ್ನಾಟಕ ಗೃಹ ಮಂಡಳಿ ಇಂಜಿನಿಯರ್ ಸಹನಾ, ಬೆಳಪು ಪಂಚಾಯಿತಿ ಮಾಜಿ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಗುತ್ತಿಗೆದಾರ ವಾಸುದೇವ್ ಶೆಟ್ಟಿ ಮುಂತಾದವರು ಇದ್ದರು.


Aware others:

Leave a Reply

Your email address will not be published. Required fields are marked *

error: Content is protected !!