ಸುಜ್ಞಾನ ಎಜುಕೇಶನ್ ಟ್ರಸ್ಟ್ ವತಿಯಿಂದ ಸ್ವಚ್ಛತಾ ಅಭಿಯಾನದ ಮೂಲಕ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ.
ಕುಂದಾಪುರ: ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್‌ನ ಕ್ಯಾಂಪಸ್‌ನಲ್ಲಿ ಸ್ವಚ್ಛತಾ ಅಭಿಯಾನದ ಮೂಲಕ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಸರಳತೆ, ಸತ್ಯ, ಅಹಿಂಸೆ ಹಾಗೂ ಶಿಸ್ತಿನಂತಹ ಜೀವನ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಲಾಯಿತು.

ಅತಿಥಿಗಳಾಗಿ ಆಗಮಿಸಿದ ಯಡಾಡಿ ಮತ್ಯಾಡಿ ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಯವರಾದ ಮಧುಸೂದನ್ ಪ್ರಸಾದ್ ಅವರು ವಿದ್ಯಾರ್ಥಿಗಳನ್ನು ದ್ದೇಶಿಸಿ ಮಾತನಾಡಿ ದಿನಾಚರಣೆಯ ಮಹತ್ವ ವನ್ನು ತಿಳಿಸಿ ಸ್ವಚ್ಛ ಪರಿಸರವನ್ನು ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸ್ವಚ್ಛತೆಯನ್ನು ತಮ್ಮ ದೈನಂದಿನ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂಬ ಸಂದೇಶವನ್ನು ನೀಡಿದರು.

ಸಮಾಜ ವಿಜ್ಞಾನ ಶಿಕ್ಷಕಿ ಪ್ರೀತಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಗಾಂಧೀ ಜಯಂತಿಯ ಆಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ದೇಶಪ್ರೇಮ, ಸತ್ಯ, ಅಹಿಂಸೆ, ಶಿಸ್ತು ಹಾಗೂ ಉತ್ತಮ ಜೀವನ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ ಕೋಶಾಧಿಕಾರಿ ಭರತ್ ಶೆಟ್ಟಿ ಹಾಗೂ ಅತಿಥಿಗಳಾಗಿ ಯಡಾಡಿ-ಮತ್ಯಾಡಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮಧುಸೂದನ್ ಪ್ರಸಾದ್ ಅವರು ಉಪಸ್ಥಿತರಿದ್ದರು. ಸಂಸ್ಕೃತ ಉಪನ್ಯಾಸಕ ರಜತ್ ಭಟ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಗುಡ್ಡೆಯಂಗಡಿ ಪೇಟೆಯಿಂದ ಜನಜಾಗೃತಿ ಜಾಥ ಮತ್ತು ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಈ ಅಭಿಯಾನವನ್ನು ಕಟಿಲೇಶ್ವರಿ ಡೆವಲಪರ್ಸ್ ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಪ್ರಕಾಶ್ ಶೆಟ್ಟಿ ಇವರು ಉದ್ಘಾಟಿಸಿದರು. ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಆದರ್ಶಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.
