BlogEducationLocal newsNational NewsPoliticsState newsTrending

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಎಸ್.ಎಲ್.ಭೋಜೇಗೌಡ ನಾಮಪತ್ರ ಸಲ್ಲಿಕೆ

Aware others:

ಮೈಸೂರು: ಕರ್ನಾಟಕ ರಾಜ್ಯ ವಿಧಾನಪರಿಷತ್ತಿನ ಆರು ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಈ ಪೈಕಿ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಮೈತ್ರಿ ಕೂಟದ ಅಭ್ಯರ್ಥಿಯಾಗಿ ಜಾತ್ಯಾತೀತ ಜನತಾ ದಳದ ಹಿರಿಯ ಮುಖಂಡ ಎಸ್.ಎಲ್.ಭೋಜೇಗೌಡ ಸೋಮವಾರ ಬೆಳಿಗ್ಗೆ ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ಮೈಸೂರು ಪ್ರಾದೇಶಿಕ ಆಯುಕ್ತ ಪ್ರಕಾಶ್ ನಾಮಪತ್ರ ಸ್ವೀಕರಿಸಿದರು. ಮಾಜೀ ಸ್ಪೀಕರ್ ಭೋಪಯ್ಯ, ಮಾಜೀ ಸಚಿವರಾದ ಪುಟ್ಟಣ್ಣ ಹಾಗೂ ಸಾ.ರಾ.ಮಹೇಶ್, ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಮೇಘರಾಜ್ ಜೊತೆಗಿದ್ದರು.

ಕಳೆದ ಎರಡು ಅವಧಿಗೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ನಿಂದ ಚುನಾವಣೆಗೆ ಸ್ಪರ್ಧಿಸಿದ್ದ ಎಸ್.ಎಲ್.ಭೋಜೇಗೌಡ ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಈಶಾನ್ಯ ಪಧವೀಧರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ ಪಾಟೀಲ್, ನೈರುತ್ಯ ಪದವೀಧರ ಕ್ಷೇತ್ರಕ್ಕೆ ಆಯನೂರ್ ಮಂಜುನಾಥ್ (19.4.23ರಿಂದ ಖಾಲಿ ಇದೆ) ಬೆಂಗಲೂರು ಪದವೀಧರ ಕ್ಷೇತ್ರಕ್ಕೆ ಎ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣ ಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇ ಗೌಡ ಸದಸ್ಯರಾಗಿ ಆಯ್ಕೆಯಾಗಿದ್ದು, ಇವರ ಅಧಿಕಾರಾವಧಿಯು ಜೂನ್ 21ಕ್ಕೆ ಮುಗಿಯಲಿದೆ.

ಚುನಾವಣಾ ಆಯೋಗವು ಈ ಆರು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರ ಪರಿಶೀಲನೆ, ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ.

ಜೂನ್ 6ರಂದು ಮತ ಎಣಿಕೆ ನಡೆಯಲಿದ್ದು, ಜೂನ್ 12ರಂದು ಚುನಾವಣೆಯ ಎಲ್ಲಾ ಪ್ರಕ್ರಿಯೆಗಳು ಮುಗಿಯುತ್ತವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಐದು ಜಿಲ್ಲೆಗಳು ಸೇರಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ(ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾ.) ಜಿಲ್ಲೆಗಳು ಸೇರಿವೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 19380 ಮತದಾರರಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!