ಅಮಾಸೆಬೈಲ್: ಶುಚಿತ್ವ, ಆರೋಗ್ಯ ರಕ್ಷಿಸಿಕೊಳ್ಳಿ – ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದ ಶಾಸಕ ಗುರುರಾಜ್ ಗಂಟಿಹೊಳೆ
ಕುಂದಾಪುರ: ಪ್ರತಿಯೊಬ್ಬರೂ ಸ್ವಚ್ಛತೆ ಹಾಗೂ ಆರೋಗ್ಯದ ರಕ್ಷಣೆ ಮಾಡಿಕೊಂಡಾಗ ಹೆಚ್ಚಿನ ಸಮಸ್ಯೆಗಳನ್ನು ತಡೆಯಬಹುದು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುವ ಸಾಧ್ಯತೆಗಳಿದ್ದು, ಎಲ್ಲಿಯೂ ನೀರು ನಿಲ್ಲಲು ಅವಕಾಶ ನೀಡಬಾರದು. ನಾವಿರುವ ಪರಿಸರದ ಸ್ವಚ್ಛತೆಗೆ ವಿಶೇಷ ಆಧ್ಯತೆ ನೀಡುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಹೇಳಿದರು.

ಅಮಾಸೆಬೈಲು ಚಾರಿಟಬಲ್ ಟ್ರಸ್ಟ್, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘ, ಕರ್ನಾಟಕ ಬ್ಯಾಂಕ್, ಅಮಾಸೆಬೈಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಅಮಾಸೆಬೈಲು ಗ್ರಾಮ ಪಂಚಾಯತಿ ಹಾಗೂ ಕುಂದಾಪುರ ಕೋಟೇಶ್ವರದ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಗುರುವಾರ ಅಮಾಸೆಬೈಲು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ವೈದ್ಯ ಪದ್ಧತಿಯು ಸಾಕಷ್ಟು ಮಹತ್ವ ಪಡೆದಿದ್ದು, ಎಲ್ಲ ಕಾಯಿಲೆಗಳಿಗೂ ಈ ಪದ್ಧತಿಯಲ್ಲಿ ಚಿಕಿತ್ಸೆ ಮತ್ತು ಔಷಧ ಲಭ್ಯವಿದೆ. ಉತ್ತಮ ಆರೋಗ್ಯದ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಎಲ್ಲರೂ ಜೊತೆಯಾಗಬೇಕು ಎಂದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬಂತೆ ಇಂದಿನ ಒತ್ತಡಮಯ ಬದುಕಿನಲ್ಲಿ ಇಂತಹ ಶಿಬಿರಗಳು ಸಹಕಾರಿಯಾಗಲಿವೆ ಎಂದರು. ಹಿರಿಯರಾದ ಅಶೋಕ್ ಕೊಡ್ಗಿ, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಮದ ಅನೇಕರು ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಕೊಂಡು, ವೈದ್ಯರಿಂದ ಸಲಹೆ, ಸೂಚನೆ ಪಡೆದರು.
