ಜು. 6: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 41,೦೦೦ ಜೊತೆ ಸಮವಸ್ತ್ರ ವಿತರಣೆ ಮತ್ತು ವಿದ್ಯಾ ಪೋಷಕ್ ಪ್ರಶಸ್ತಿ ಪ್ರದಾನ ಸಮಾರಂಭ


ಬೈಂದೂರು: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇವರಿಂದ ಬೈಂದೂರು ಜನಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಬೈಂದೂರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 350 ಸರ್ಕಾರಿ / ಅನುದಾನಿತ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 41,೦೦೦ ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಸಮಾರಂಭವನ್ನು ಬೈಂದೂರಿನ ಜೆ.ಎನ್.ಆರ್ ಸಭಾಂಗಣದಲ್ಲಿ ಜುಲೈ 6ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಹೆಚ್.ಎಸ್. ಶೆಟ್ಟಿ ಹೇಳಿದ್ದಾರೆ. ಬೈಂದೂರಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ಧಿಗಾರರೊಂದಿಗೆ ಆನ್ ಲೈನ್ ಮೂಲಕ ಮಾತನಾಡಿದರು.

ಈ ಸಂದರ್ಭ ಮಾತನಾಡಿದ ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಮಾತನಾಡಿ, ಕಾರ್ಯಕ್ರಮದಲ್ಲಿ ಹಿರಿಯ ನಿವೃತ್ತ ಶಿಕ್ಷಕ ಹಾಗೂ ಯಕ್ಷಗಾನ ಪ್ರಸಂಗಕರ್ತ ಶ್ರೀ ಕಂದಾವರ ರಘುರಾಮ ಶೆಟ್ಟಿಯವರಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಮೌಲ್ಯದ ಚೆಕ್ ಹಾಗೂ ತಾಮ್ರಪತ್ರವನ್ನು ಒಳಗೊಂಡಿದೆ. ಕಾರ್ಯಕ್ರಮಕ್ಕೆ ಮುನ್ನ ಭಾವಗೀತೆಗಳ ಗಾಯನ ಕಾರ್ಯಕ್ರಮವೂ ನಡೆಯಲಿದೆ ಎಂದರು.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರದ ಸಭಾಪತಿ ಯು. ಖಾದರ್ ಅವರು ಉದ್ಘಾಟಿಸಲಿದ್ದಾರೆ. ಮಾಜೀ ಸಚಿವ ವಿನಯಕುಮಾರ್ ಸೊರಕೆ ಸಮವಸ್ತ್ರ ವಿತರಿಸಲಿದ್ದಾರೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ. ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಶೂಭಾಶಂಸನೆಗೈಯಲಿದ್ದಾರೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಅಧ್ಯಕ್ಷ ಡಾ. ಹೆಚ್.ಎಸ್.ಶೆಟ್ಟಿ ಪ್ರಾಸ್ತಾವಿಸಲಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್(ರಿ) ನ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೆ.ಗಣಪತಿ ಉಪಸ್ಥಿತರಿರಲಿದ್ದಾರೆ ಎಂದರು. ಈ ಸಂದರ್ಭ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕಗಷ ಹೆಚ್ ನಾಗರಾಜ ಶೆಟ್ಟಿ, ಬಿ. ರವಿರಾಜ್ ಶೆಟ್ಟಿ, ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
