ಕುಂದಾಪುರ: ಆ.31, ಸೆ.1ಕ್ಕೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಕುಂದಾಪುರ : ಈ ವರ್ಷದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ ಆಶ್ರಯದಲ್ಲಿ ಅಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಬಿದ್ಕಲ್‍ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಪ್ರೌಢಶಾಲಾ ವಿಭಾಗದ ಆವರಣದಲ್ಲಿ ನಡೆಯಲಿದೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಉಮೇಶ ಪುತ್ರನ್ ಹೇಳಿದ್ದಾರೆ. ಅವರು ಕುಂದಾಪುರ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಆಗಸ್ಟ್ 31ರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸೆ.1ರಂದು ಬೆಳಿಗ್ಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಸಮ್ಮೇಳನ ಉದ್ಘಾಟನೆ, ವಿವಿಧ ಗೋಷ್ಠಿಗಳು, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದು ನಮ್ಮ ಅವಧಿಯಲ್ಲಿ ನಡೆಯುತ್ತಿರುವ ಮೂರನೇ ಸಮ್ಮೇಳನವಾಗಿದ್ದು, ಬಿದ್ಕಲ್‍ಕಟ್ಟೆಯಲ್ಲಿ ತಾಲೂಕು ಸಮ್ಮೇಳನ ನಡೆಯುತ್ತಿರುವುದಕ್ಕೆ ಪರಿಸರದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿಯವರನ್ನು ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಕನ್ನಡ ಮಾಧ್ಯಮದಲ್ಲಿ ಶೇ.100 ಫಲಿತಾಂಶ ಪಡೆದ ಸರ್ಕಾರಿ ಶಾಲೆಗಳನ್ನು ಗೌರವಿಸಲಾಗುತ್ತದೆ ಎಂದರು.
ತಾಲೂಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಂ.ಮಹೇಶ ಹೆಗ್ಡೆ ಮಾತನಾಡಿ, ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಈಗಾಗಲೆ ಎರಡು ಪೂರ್ವಭಾವಿ ಸಭೆಗಳನ್ನು ನೆಡೆಸಿದ್ದೇವೆ. ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬಿದ್ಕಲ್ ಕಟ್ಟೆಯಲ್ಲಿ ಯಶಸ್ವಿ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು. ಆರ್ಥಿಕ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಘಟಕದ ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ಉಪಸ್ಥಿತರಿದ್ದರು.

