ಬೈಂದೂರಿನಲ್ಲಿ “ಮೂಕಾಂಬಿಕಾ ವಿಮಾನ ನಿಲ್ದಾಣ” ಮಂಜೂರಾತಿಗೆ ಕೇಂದ್ರ ವಿಮಾನಯಾನ ಸಚಿವರಿಗೆ ನಿಯೋಗದಿಂದ ಮನವಿ

ಕುಂದಾಪುರ: ದೆಹಲಿಯ ವಿಮಾನಯಾನ ಸಚಿವರನ್ನು ಭೇಟಿ ಮಾಡಿದ ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ.ರಾಘವೇಂದ್ರ ಹಾಗೂ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದ ನಿಯೋಗವು ಬೈಂದೂರಿನಲ್ಲಿ ಮೂಕಾಂಬಿಕಾ ಕಾರಿಡಾರ್ ನಿರ್ಮಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿತು. ಈ ಸಂದರ್ಭ ಸಚಿವರಿಗೆ ಬೈಂದೂರಿನಲ್ಲಿ ವಿಮಾನ ನಿಲ್ದಾಣದ ಅಗತ್ಯಗಳನ್ನು ಮನವರಿಕೆ ಮಾಡಿದ್ದು, ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ವಿಮಾನ ನಿಲ್ದಾಣವಾದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಅಲ್ಲದೇ ಸುತ್ತಮುತ್ತಲಿನಲ್ಲಿ ಹಲವಾರು ವಿಶ್ವ ಪ್ರಸಿದ್ಧ ಧಾರ್ಮಿಕ ಕೇಂದ್ರಗಳೂ, ಪ್ರವಾಸೋದ್ಯಮ ಕೇಂದ್ರಗಳೂ ಇರುವುದರಿಂದ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬೈಂದೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಸೂಕ್ತವಾದ ಸ್ಥಳ ಇರುವುದರಿಂದ ಬೈಂದೂರಿನಲ್ಲಿ ವಿಮಾನ ನಿಲ್ದಾಣ ಮಂಜೂರಾತಿ ಮಾಡಬೇಕು ಎಂದು ಮನವಿ ಮಾಡಲಾಯಿತು.



ಇದಲ್ಲದೇ ಬೈಂದೂರು ರೈಲ್ವೇ ನಿಲ್ದಾಣವನ್ನೂ ಮೇಲ್ದರ್ಜೆಗೆ ಏರಿಸಬೇಕು, ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಮುಂದಾಗಬೇಕು, ಕೊಡಚಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ಮೂಲಕ ಪ್ರವಾಸೋದ್ಯಮಕ್ಕೆ ಆದ್ಯತೆ ಕಲ್ಪಿಸಬೇಕು ಎಂದು ವಿವಿಧ ಸಚಿವರನ್ನು ಭೆಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಬೈಂದೂರು ಬಿಜೆಪಿ ಮುಖಂಡರುಗಳಾದ ಉಡುಪಿ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಟದ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ, ಕೊಲ್ಲೂರು ದೇವಳದ ಮಾಜೀ ಧರ್ಮದರ್ಶಿಗಳಾದ ಕೃಷ್ಣಪ್ರಸಾದ್ ಅಡ್ಯಂತಾಯ, ವೆಂಕಟೇಶ್ ಕಿಣಿ, ಆದರ್ಶ ಮೊದಲಾದವರು ನಿಯೋಗದಲ್ಲಿದ್ದರು.
