ಮಹಿಳಾ ಸಬಲೀಕರಣಕ್ಕೆ ಶಕ್ತಿಯೋಜನೆ – 500 ಕೋಟಿ ದಾಟಿದ ಫಲಾನುಭವಿಗಳು – ಕುಂದಾಪುರದಲ್ಲಿ ಕಾಂಗ್ರೆಸ್ ನಿಂದ ಸಂಭ್ರಮಾಚರಣೆ
ಕುಂದಾಪುರ: ಜಾಗತಿಕ ಮಟ್ಟದಲ್ಲಿ ಮೊತ್ತ ಮೊದಲಬಾರಿಗೆ ಕರ್ನಾಟಕದಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದ್ದು, ಶಕ್ತಿಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಂದಾಪುರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಸಮಭ್ರಮಾಚರಣೆ ಮಾಡಿದ್ದಾರೆ.

ಈ ಸಂದರ್ಭ ಕಾಂಗ್ರೆಸ್ ಮುಖಂಡ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಮೊಳಹಳ್ಳಿ ದಿನೇಶ್ ಹೆಗ್ಡೆ ಮಾತನಾಡಿ, ರಾಜ್ಯ ಸರ್ಕಾರವು ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಯಶಸ್ವಿಯಾಗಿ ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದು, ಯಾವುದೇ ಕಾರಣಕ್ಕೆ ಈ ಯೋಜನೆಗಳು ನಿಲ್ಲುವುದಿಲ್ಲ ಎಂದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಮಾತನಾಡಿ, ಸರಕಾರದ ಗ್ಯಾರಂಟಿ ಯೋಜನೆಗಳ ಮೂಲಕವಾಗಿ ಮಹಿಳೆಯು ಹಣಕ್ಕಾಗಿ ಪತಿ, ತಂದೆ, ಮಕ್ಕಳನ್ನು ಆಶ್ರಯಿಸಬೇಕಾದ ಅನಿವಾರ್ಯವನ್ನು ತಪ್ಪಿಸಿದೆ. ಮಹಿಳೆಯರು ಸಬಲೀಕರಣಗೊಳ್ಳಲು ಸರಕಾರದ ಈ ನಡೆ ಅನುಕರಣೀಯ ಎಂದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿ, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. ಅಂತಹ ಮಹತ್ವಾಕಾಂಕ್ಷೆಯ ಯೋಜನೆ, ಈಡೇರಿದ ಆಶ್ವಾಸನೆಯಿಂದಾಗಿ ಅಪಪ್ರಚಾರಕ್ಕೆ ಸಡ್ಡು ಹೊಡೆದು ಜನಸಾಮಾನ್ಯರಿಗೆ ಸಹಾಯ ಆಗಿದೆ. ಶಕ್ತಿ ಯೋಜನೆ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಿದೆ ಎಂದು ಹೇಳಿದರು.
ಉಡುಪಿಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕವಾಗಿ ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದ ಕಾರ್ಯಕರ್ತರನ್ನು ಕುಂದಾಪುರದಲ್ಲಿ ಬರಮಾಡಿಕೊಂಡು ಹೂ ನೀಡಿ ಸಿಹಿ ತಿಂಡಿ ವಿತರಿಸಿ ಸಂಭ್ರಮಿಸಲಾಯಿತು. ಕೆಎಸ್‌ಆರ್‌ಟಿಸಿ ಡಿಪೊ ಮೆನೆಜರ್ ಉದಯ ಕುಮಾರ್ ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಗೀತಾ ವಾಗ್ಳೆ, ಗ್ಯಾರಂಟಿ ಸಮಿತಿಯ ಸದಸ್ಯರಾದ ಅಭಿಜಿತ್ ಪೂಜಾರಿ, ವಾಣಿ ಶೆಟ್ಟಿ, ಆಶಾ ಕರ್ವಾಲೊ, ನಾರಾಯಣ ಆಚಾರ್ ಕೋಣಿ, ಜಹೀರ್ ಅಹ್ಮದ್, ಪ್ರಾಧಿಕಾರದ ಸದಸ್ಯ ಚಂದ್ರ ಅಮೀನ್, ಕೆಡಿಪಿ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ, ಕಾಂಗ್ರೆಸ್ ಮುಖಂಡರಾದ ವಿಕಾಸ್ ಹೆಗ್ಡೆ, ಸರಸು ಬಂಗೇರ, ಶೋಭಾ ಪುತ್ರನ್, ಜಾನಕಿ ಬಿಲ್ಲವ ಕೋಟೇಶ್ವರ, ರೋಶನ್ ಕುಮಾರ್ ಶೆಟ್ಟಿ, ಅಶೋಕ್ ಸುವರ್ಣ ಮೊದಲಾದವರು ಇದ್ದರು.