ಗಣೇಶೋತ್ಸವದಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ – ಪವನ್ ನಾಯಕ್
ಕುಂದಾಪುರ: ಗಣೇಶೋತ್ಸವ ಸಂದರ್ಭ ಇಲಾಖೆಗೆ ಯಾವುದೇ ದೂರು ಬಾರದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಸರಕಾರ, ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆ ಮಾರ್ಗಸೂಚಿಯಂತೆ ನಡೆಸಬೇಕು. ಪ್ರತಿಷ್ಠಾಪನೆಯಿಂದ ವಿಸರ್ಜನೆ ತನಕ ಏನೇನು ಸಮಸ್ಯೆಗಳು ಬರಬಹುದೆಂದು ಪೂರ್ವಾವಲೋಕನ ಮಾಡಿಕೊಂಡು ಬಗೆಹರಿಸಿಕೊಳ್ಳಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಗಣೇಶೋತ್ಸವ ಆಚರಿಸಲು ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಯಾವುದೇ ಸಮಸ್ಯೆಗಳು ಉದ್ಭವ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗಂಗೊಳ್ಳಿ ಎಸೈ ಪವನ್ ನಾಯಕ್ ಹೇಳಿದರು.

ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ಗಣೇಶೋತ್ಸವದ ಪೂರ್ವಭಾವಿಯಾಗಿ ತ್ರಾಸಿಯ ಕೊಂಕಣಿ ಖಾರ್ವಿ ಸಭಾಭವನದಲ್ಲಿ ಭಾನುವಾರ ಸಂಜೆ ಜರಗಿದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಯ ಪ್ರಮುಖರ ಶಾಂತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಮಾಹಿತಿ ನೀಡಿ ಮಾತನಾಡಿದ ಗಂಗೊಳ್ಳಿ ಪೊಲೀಸ್ ಠಾಣೆಯ ಎಸೈ (ತನಿಖೆ) ಬಸವರಾಜ್ ಕನಶೆಟ್ಟಿ, ಸಾರ್ವಜನಿಕ ಸ್ಥಳದಲ್ಲಿ ಗಣೇಶೋತ್ಸವ ನಡೆಸಲು ಸ್ಥಳೀಯಾಡಳಿತದಿಂದ ಅನುಮತಿ ಪಡೆಯಬೇಕು. ಭದ್ರತೆಗಾಗಿ ಸಿಸಿ ಕ್ಯಾಮರಾ ಅಳವಡಿಸಿ ಸ್ವಯಂಸೇವಕರನ್ನು ನಿಯೋಜಿಸಬೇಕು. ಸರಕಾರ ಹಾಗೂ ಇಲಾಖೆಯ ಸೂಚನೆ, ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಿ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.
ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು.